ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಆಕ್ಟಿವ್ ಆಗಿದ್ದಾರೆ. ಮೂರು ದಿನದ ಅಧಿವೇಶನದಲ್ಲಿ ಸ್ಪೀಕರ್ ಗೆ ಕ್ಲಾಸ್ ತಗೊಂಡು ಗುಡುಗಿದ್ದರು. ಇದೀಗ ಬೈಎಲಕ್ಷನ್ ಹತ್ತಿರವಾಗುತ್ತಿದ್ದು, ಗೆಲ್ಲಲು ಮಾಸ್ಟರ್ ಪ್ಲಾನ್ ವುಂದು ಸಿದ್ಧಪಡಿಸುತ್ತಿದ್ದಾರೆ. ಮುಖ್ಯವಾಗಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ತಕ್ಕ ಶಾಸ್ತಿ ಮಾಡಲು 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.
ಆದ್ದರಿಂದ ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಸೇರಿದಂತೆ ಪ್ರಮುಖ ಮುಖಂಡರಿಗೆ ಸೂಚನೆ ನೀಡಿದ್ದಾರೆ. ವಿಧಾನಮಂಡಲ ಅಧಿವೇಶನದ ನಡುವೆಯೇ ವಿಧಾನಸೌಧದಲ್ಲಿ ಉಪ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ತಮ್ಮ ಪಕ್ಷದ ಶಾಸಕರೊಂದಿಗೆ ಅನೌಪಚಾರಿಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಈಶ್ವರ್ ಖಂಡ್ರೆ, ಲಕ್ಷ್ಮೇ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸೇರಿದಂತೆ ಮೇಲ್ಮನೆಯ ವಿವಿಧ ಕಾಂಗ್ರೆಸ್ ಸದಸ್ಯರು ಹಾಗೂ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಆರ್.ವಿ.ದೇವರಾಜ್, ವಿ.ಆರ್ ಸುದರ್ಶನ್ ಸೇರಿದಂತೆ ಪಕ್ಷದ ಹಲವು ನಾಯಕರು ಭಾಗವಹಿಸಿದ್ದರು.
ಸಭೆಯಲ್ಲಿ ಶಾಸಕರನ್ನುದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಒಟ್ಟು 17 ಜನ ಅನರ್ಹ ಶಾಸಕರು ಕಾರಣ. ಆ ಪೈಕಿ ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ 15 ಕ್ಷೇತ್ರಗಳ ಪೈಕಿ ಕನಿಷ್ಠ 12ರಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು. ಪಕ್ಷಕ್ಕೆ ದ್ರೋಹ ಮಾಡಿ ಹೋದ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು. ಇದಕ್ಕಾಗಿ ಗೆಲುವೊಂದೆನ್ನೇ ಮಾನದಂಡವಾಗಿಟ್ಟುಕೊಂಡು ಚುನಾವಣೆಗೆ ಇನ್ನೊಂದು ವಾರ ಇರುವುದರೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು.
ಯಾರೇ ಅಭ್ಯರ್ಥಿಗಳಾಗಲಿ. ಪಕ್ಷದ ಗೆಲುವಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ. ಯಾವುದೇ ಸಣ್ಣಪುಟ್ಟಭಿನ್ನಾಭಿಪ್ರಾಯಗಳಿದ್ದರೂ ಬದಿಗೊತ್ತಿ ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಸೂಚನೆ ನೀಡಿದ್ದಾರೆ.