ಹಾಸನ: ಜನತಾದಳ ಪಕ್ಷವು ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ, ಸ್ಪರ್ಧಿಸಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.  ಉಪಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.


ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಪಕ್ಷದ ಭಿನ್ನಮತೀಯರ ಸಭೆ ನಡೆಸುತ್ತಾರೆಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮಗಳ ಇಂತಹ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂಸತ್ತಿನಲ್ಲಿರಬೇಕಿತ್ತು. ಸಂವಿಧಾನದ 370ನೆ ವಿಧಿ ಕುರಿತು ಅವರು ಮಾತನಾಡಬೇಕಿತ್ತು ಎಂದರು. ರಾಜ್ಯ ಸರ್ಕಾರದ ಮಂತ್ರಿಗಳ ಸ್ವಾತಂತ್ರ್ಯವನ್ನು ಬಿಜೆಪಿ ಕಸಿದುಕೊಂಡಿದೆ. ಕೇವಲ ಬಿಜೆಪಿ ಕೇಂದ್ರ ಕಚೇರಿಯ ಹಿಡಿತದಲ್ಲಿ ರಾಜ್ಯ ಸರ್ಕಾರದ ಆಡಳಿತ ನಡೆಯುತ್ತಿದೆ ಎಂದು ಹೆಚ್. ಡಿ. ಕೆ ಆರೋಪಿಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ಒದಗಿಸುವುದಕ್ಕಿಂತ ಲೂಟಿ ಮಾಡುವುದರಲ್ಲೇ ಬಿಜೆಪಿ ಸರ್ಕಾರ ಸಕ್ರಿಯವಾಗಿದೆ ಎಂದು ಟೀಕಿಸಿದರು.


ಯಾವಾಗಲೂ ಸರ್ಕಾರ ಯಾವುದೇ ಇರಲಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು. ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದುಹೇಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲ ಇಲಾಖೆಯಲ್ಲಿನ ಹಣಬಿಡುಗಡೆಗೆ ಕಡಿತ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೃಷಿಕರ ಪರಿಸ್ಥಿತಿ ಹದಗೆಟ್ಟಿದೆ. ಬೆಳೆ ನಾಶವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಬೆಳೆಹಾನಿಗೆ ಸೂಕ್ತ ರೀತಿಯಲ್ಲಿ ಪರಿಹಾರ ವಿತರಿಸಿಲ್ಲ. ರೈತರ ಸಾಲಮನ್ನಾ ಯೋಜನೆ ಶೇ.90ರಷ್ಟು ಫಲಪ್ರದವಾಗಿದೆ ಎಂದು ಪತ್ರಿಕೆಯೊಂದರಲ್ಲಿ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆತಂದ ಯಾವುದೇ ಯೋಜನೆಯನ್ನು ತಾವು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾದಾಗ ಕಡಿತ ಮಾಡಿರಲಿಲ್ಲ ಎಂದು ದೋಸ್ತಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.  ರೈತರ ಸಾಲಮನ್ನಾ ಯೊಜನೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಯಾವುದೇ ಧಕ್ಕೆಯಾಗಿಲ್ಲ. ಆದರೆ ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಬೂಬು ಹೇಳುತ್ತಿದೆ. ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸುವುದು ಕೇವಲ ಘೋಷಣೆಯಾಗಿ ಉಳಿದಿದೆ. ತಾತ್ಕಾಲಿಕ ತೇಪೆ ಪರಿಹಾರಕ್ಕಿಂತ ಶಾಶ್ವತ ಪರಿಹಾರ ನೀಡಬೇಕು ಎಂದರು.




Find out more: